ಶಿವಮೊಗ್ಗ,ಏ.8: ಶಿವಮೊಗ್ಗ ಮಹಾನಗರ ಪಾಲಿಕೆ ವ್ಯಾಪ್ತಿಯಲ್ಲಿರುವ ಬೊಬ್ಬನಕಟ್ಟೆ ಆಶ್ರಯ ಬಡಾವಣೆಗೆ ಕರ್ನಾಟಕದ ಮಾಜಿ ಮುಖ್ಯಮಂತ್ರಿಗಳಾದ ದಿವಂಗತ ಎಸ್. ಬಂಗಾರಪ್ಪ ಅವರ ಹೆಸರನ್ನು ನಾಮಕರಣ ಮಾಡಲು ರಾಜ್ಯ ಸರ್ಕಾರ ಅಧಿಕೃತವಾಗಿ ಹಸಿರು ನಿಶಾನೆ ತೋರಿಸಿದೆ.
ನಗರಾಭಿವೃದ್ಧಿ ಇಲಾಖೆಯ ಸರ್ಕಾರದ ಅಧೀನ ಕಾರ್ಯದರ್ಶಿಗಳು ಈ ಕುರಿತು ಆದೇಶ ಹೊರಡಿಸಿದ್ದು, ಶಿವಮೊಗ್ಗ ಮಹಾನಗರ ಪಾಲಿಕೆಯ ಪ್ರಸ್ತಾವನೆಗೆ ಒಪ್ಪಿಗೆ ಸೂಚಿಸಿದೆ.
ಕರ್ನಾಟಕ ಮಹಾನಗರ ಪಾಲಿಕೆಗಳ ಅಧಿನಿಯಮ 1976ರ ಕಲಂ 293(1) ರನ್ವಯ ಸರ್ಕಾರಕ್ಕೆ ಇರುವ ಅಧಿಕಾರವನ್ನು ಬಳಸಿ ಈ ಆದೇಶ ಹೊರಡಿಸಲಾಗಿದ್ದು, ಈ ಹಿಂದೆ ಶಿವಮೊಗ್ಗ ಮಹಾನಗರ ಪಾಲಿಕೆಯು ಬಡಾವಣೆಗೆ ಮಾಜಿ ಮುಖ್ಯಮಂತ್ರಿಗಳ ಹೆಸರಿಡುವಂತೆ ನಿರ್ಣಯ ಕೈಗೊಂಡು ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಸಿತ್ತು. ಈ ಪ್ರಸ್ತಾವನೆಯನ್ನು ಕೂಲಂಕಷವಾಗಿ ಪರಿಶೀಲಿಸಿದ ಸರ್ಕಾರ, ಈಗ ಅಂತಿಮ ಅನುಮೋದನೆ ನೀಡಿದೆ.
