ಶಿವಮೊಗ್ಗ ಟೆಲೆಕ್ಸ್ ಸುದ್ದಿ,ಜು.21
ಅಪ್ರಾಪ್ತ ಬಾಲಕಿಗೆ ಲೈಂಗಿಕ ಕಿರುಕುಳ ನೀಡಿದ ಪ್ರಕರಣದಲ್ಲಿ ತಪ್ಪಿತಸ್ಥ ಆರೋಪಿಗೆ 3 ವರ್ಷಗಳ ಕಠಿಣ ಕಾರಾಗೃಹವಾಸ ಶಿಕ್ಷೆ ಹಾಗೂ 50,000 ರೂಪಾಯಿ ದಂಡ ವಿಧಿಸಿ ಶಿವಮೊಗ್ಗದ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ ಆದೇಶ ಹೊರಡಿಸಿದೆ.
2024ರಲ್ಲಿ ಶಿಕಾರಿಪುರ ತಾಲೂಕಿನ 23 ವರ್ಷದ ವ್ಯಕ್ತಿಯೊಬ್ಬರು, 15 ವರ್ಷದ ಅಪ್ರಾಪ್ತ ಬಾಲಕಿಗೆ ಲೈಂಗಿಕ ಕಿರುಕುಳ ನೀಡಿದ್ದ ಕುರಿತು ಶಿರಾಳಕೊಪ್ಪ ಪೊಲೀಸ್ ಠಾಣೆಯಲ್ಲಿ ಪೋಕ್ಸೋ ಕಾಯ್ದೆಯಡಿ ಪ್ರಕರಣ ದಾಖಲಾಗಿತ್ತು.
ಪ್ರಕರಣದ ಆಗಿನ ತನಿಖಾಧಿಕಾರಿಯಾದ ಶಿರಾಳಕೊಪ್ಪ ಪೊಲೀಸ್ ಠಾಣೆಯ ಪಿಎಸ್‌ಐ ಪುಷ್ಪಾ ಈ ಪ್ರಕರಣದ ಸಮಗ್ರ ತನಿಖೆ ಪೂರ್ಣಗೊಳಿಸಿ, ಘನ ನ್ಯಾಯಾಲಯಕ್ಕೆ ದೋಷಾರೋಪಣ ಪತ್ರ (ಚಾರ್ಜ್ಶೀಟ್) ಸಲ್ಲಿಸಿದ್ದರು.
ಶಿವಮೊಗ್ಗದ ಘನ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ (ಎಫ್‌ಟಿಎಸ್‌ಸಿ-1) ದಲ್ಲಿ ಪ್ರಕರಣದ ವಿಚಾರಣೆ ನಡೆಯಿತು. ಸರ್ಕಾರಿ ಅಭಿಯೋಜಕರಾದ ಶ್ರೀಧರ್ ಸರ್ಕಾರದ ಪರವಾಗಿ ವಾದ ಮಂಡಿಸಿದ್ದರು. ವಾದ-ಪ್ರತಿವಾದಗಳನ್ನು ಆಲಿಸಿದ ನ್ಯಾಯಾಧೀಶರಾದ ನಿಂಗನಗೌಡ ಭ. ಪಾಟೀಲ್ ಆರೋಪಿಗೆ 03 ವರ್ಷ ಕಠಿಣ ಕಾರಾಗೃಹವಾಸ ಶಿಕ್ಷೆ ಹಾಗೂ 50,000 ದಂಡ ವಿಧಿಸಿ ತೀರ್ಪು ನೀಡಿದ್ದಾರೆ.
