ಶಿವಮೊಗ್ಗ ಟೆಲೆಕ್ಸ್ ಸುದ್ದಿ,ಜು.25
ಕಾಂಗ್ರೆಸ್ ಅನ್ನು ಸದಾ ಬೆಂಬಲಿಸುತ್ತಾ ಬಂದಿರುವ ಮುಸ್ಲಿಂ ಸಮುದಾಯಕ್ಕೆ ಈ ಬಾರಿ ಶಿವಮೊಗ್ಗ-ಭದ್ರಾವತಿ ನಗರಾಭಿವೃದ್ದಿ ಪ್ರಾಧಿಕಾರದ ಅಧ್ಯಕ್ಷ ಸ್ಥಾನ ನೀಡಬೇಕೆಂದು ರಾಜ್ಯ ಅಲ್ಪಸಂಖ್ಯಾತರ ಹಿತರಕ್ಷಣಾ ವೇದಿಕೆಯ ಜಿಲ್ಲಾಧ್ಯಕ್ಷ ಸಯ್ಯದ್ ಮುಜೀಬುಲ್ಲ ಆಗ್ರಹಿಸಿದರು.
ಅವರು ಶನಿವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ, ಮುಸ್ಲಿಂ ಸಮುದಾಯವು ದಶಕಗಳಿಂದ ಕಾಂಗ್ರೆಸ್ ಪಕ್ಷದ ಬೆನ್ನೆಲುಬಾಗಿದೆ. 2023ರ ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷ ಅತ್ಯಂತ ಹೆಚ್ಚು ಸ್ಥಾನಗಳನ್ನು ಗೆದ್ದು ಸುಭದ್ರ ಸರ್ಕಾರ ರಚನೆಯಾಗಲು ಮುಸ್ಲಿಂ ಸಮುದಾಯದ ಕೊಡುಗೆ ಅಪಾರವಾಗಿದೆ. ಹಾಗೆಯೇ ಶಿವಮೊಗ್ಗ ವಿಧಾನಸಭಾ ಕ್ಷೇತ್ರದಲ್ಲಿ ಕಾಂಗ್ರೆಸ್ ಪಡೆದಿರುವಂತಹ 68 ಸಾವಿರ ಮತಗಳಲ್ಲಿ 50 ಸಾವಿರಗಳಿಗಿಂತ ಹೆಚ್ಚು ಮತಗಳನ್ನು ಮುಸ್ಲಿಂ ಸಮುದಾಯವು ನೀಡಿದ್ದು, ಕಾಂಗ್ರೆಸ್ ಪಕ್ಷವು ಇಲ್ಲಿ ಗೌರವಯುತವಾದ ಮತಗಳನ್ನು ಪಡೆಯಲು ಕಾರಣಿಭೂತವಾಗಿದೆ ಎಂದರು.
ಗಮನಿಸಿ: ಸಂಘಟನಾ ಸೃಜನ್ ಅಭಿಯಾನ- ನೂತನ ಜಿಲ್ಲಾಧ್ಯಕ್ಷ ಆಯ್ಕೆ ಪ್ರಕ್ರಿಯೆ
ಕಾಂಗ್ರೆಸ್ ಪಕ್ಷಕ್ಕೆ ಜಿಲ್ಲೆಯಲ್ಲಿ ಮುಸ್ಲಿಂ ಸಮುದಾಯ ಬೆಂಬಲವಿದ್ದರೂ ಇಲ್ಲಿಯವರೆಗೂ ಯಾವುದೇ ಅವಧಿಯಲ್ಲಿ ನಿಗಮ ಮಂಡಳಿಗಳ ನೇಮಕಾತಿಯಲ್ಲಿ ಪ್ರಾತಿನಿಧ್ಯ ಸಿಕ್ಕಿಲ್ಲ. ಹಾಗಾಗಿ ಮೊದಲ ಅವಧಿಯಲ್ಲಿ ಅಧ್ಯಕ್ಷ ಸ್ಥಾನ ಒಕ್ಕಲಿಗ ಸಮುದಾಯಕ್ಕೆ ಸಿಕ್ಕಿದೆ. ಈಗ ಪಕ್ಷ ಮೂರು ವರ್ಷ ಪೂರೈಸಿರುವ ಹಿನ್ನೆಯಲ್ಲಿ ನಿಗಮ ಮಂಡಳಿಯ ಅಧ್ಯಕ್ಷರನ್ನು ಬದಲಾವಣೆ ಮಾಡುತ್ತಿದ್ದು, ಮುಂದಿನ ಅವಧಿಯಲ್ಲಿ ಮುಸ್ಲಿಂ ಸಮುದಾಯಕ್ಕೆ ಪ್ರಾತಿನಿಧ್ಯ ನೀಡಬೇಕು ಎಂದು ಆಗ್ರಹಿಸಿದರು.
ಕಾಂಗ್ರೆಸ್ ಪಕ್ಷದಲ್ಲಿ ಹಲವಾರು ವಿಭಾಗಗಳಲ್ಲಿ ಪ್ರಾಮಾಣಿಕವಾಗಿ ಸೇವೆ ಸಲ್ಲಿಸಿರುವ ಪಕ್ಷದ ಕಾರ್ಯಕರ್ತರಾಗಿರುವ ಹಾಗೂ ಮುಸ್ಲಿಂ ಸಮುದಾಯದ ವಿವಿಧ ಸಂಸ್ಥೆಗಳಲ್ಲಿ ಸೇವೆ ಸಲ್ಲಿಸಿದ ಅನುಭವವಿರುವ ಯುವ ನಾಯಕ ಮೊಹಮ್ಮದ್ ಆರಿಫ್‌ಉಲ್ಲಾ ರವರನ್ನು ಸೂಡಾ ಅಧ್ಯಕ್ಷರನ್ನಾಗಿ ನೇಮಕ ಮಾಡುವಂತೆ ಪಕ್ಷದ ವರಿಷ್ಠರಿಗೆ ಒತ್ತಾಯಿಸಿದರು.
ಈ ಪತ್ರಿಕಾಗೋಷ್ಟಿಯಲ್ಲಿ ವೇದಿಕೆ ಪ್ರಮುಖರಾದ ಟಿ.ಜಫ್ರುಲ್ಲಾ, ಸಾದಿಕ್, ನೂರುಲ್ಲಾ ಖಾನ್, ಸೈಯದ್ ಉಮ್ಮರ್, ಇರ್ಫಾನ್ ಖಾನ್, ಶಫಿವುಲ್ಲಾ, ಜಬೀವುಲ್ಲಾ ಇನ್ನಿತರರು ಇದ್ದರು.
