Homeಜಿಲ್ಲೆ50 ಎಲೆಕ್ಟ್ರಿಕ್ ಬಸ್ ಸೇವೆ ಮುಕ್ತಗೊಳಿಸಿ: ಸಚಿವರಿಗೆ ಚೇತನ್ ಗೌಡ ಮನವಿ

50 ಎಲೆಕ್ಟ್ರಿಕ್ ಬಸ್ ಸೇವೆ ಮುಕ್ತಗೊಳಿಸಿ: ಸಚಿವರಿಗೆ ಚೇತನ್ ಗೌಡ ಮನವಿ

Spread the love

ಶಿವಮೊಗ್ಗ ಟೆಲೆಕ್ಸ್ ಸುದ್ದಿ,ಆ.13

ಪಿಎಂ ಇ-ಬಸ್ ಸೇವಾ ಯೋಜನೆಯಡಿ ಶಿವಮೊಗ್ಗ ನಗರಕ್ಕೆ ಮಂಜೂರಾಗಿರುವ 50 ಎಲೆಕ್ಟ್ರಿಕ್ ಬಸ್‌ಗಳನ್ನು ಸಾರ್ವಜನಿಕರ ಸೇವೆಗೆ ಮುಕ್ತಗೊಳಿಸಬೇಕು ಎಂದು ಸಾರಿಗೆ ಸಚಿವ ಭೈರತಿ ಸುರೇಶ್ ಅವರಿಗೆ ಕರ್ನಾಟಕ ರಾಜ್ಯ ಜವಳಿ ಮೂಲಸೌಲಭ್ಯ ಅಭಿವೃದ್ಧಿ ನಿಗಮದ ಅಧ್ಯಕ್ಷ ಚೇತನ್ ಕೆ. ಗೌಡ ಮನವಿ ಸಲ್ಲಿಸಿದ್ದಾರೆ.

ಬೆಂಗಳೂರಿನಲ್ಲಿ ಖುದ್ದಾಗಿ ಸಾರಿಗೆ ಸಚಿವರನ್ನು ಭೇಟಿ ಮಾಡಿದ್ದ ಅವರು , ಶಿವಮೊಗ್ಗ ಜಿಲ್ಲೆಯ ಸಾರ್ವಜನಿಕ ಸಾರಿಗೆ ವ್ಯವಸ್ಥೆಯನ್ನು ಮತ್ತಷ್ಟು ಸುಧಾರಿಸುವಂತೆ ಸುದೀರ್ಘ ಚರ್ಚೆ ನಡೆಸಿದರು.

ಮಲೆನಾಡಿನ ಹೆಬ್ಬಾಗಿಲಾದ ಶಿವಮೊಗ್ಗ ನಗರವು ಶೈಕ್ಷಣಿಕ, ವಾಣಿಜ್ಯ ಮತ್ತು ಪ್ರವಾಸೋದ್ಯಮ ಕ್ಷೇತ್ರಗಳಲ್ಲಿ ಅತ್ಯಂತ ವೇಗವಾಗಿ ಬೆಳೆಯುತ್ತಿರುವ ಪ್ರಮುಖ ಜಿಲ್ಲಾ ಕೇಂದ್ರವಾಗಿದೆ. ಜಿಲ್ಲೆಯ ಸುತ್ತಮುತ್ತಲಿನ ಗ್ರಾಮೀಣ ಪ್ರದೇಶಗಳಿಂದ ದಿನನಿತ್ಯ ಸಾವಿರಾರು ವಿದ್ಯಾರ್ಥಿಗಳು, ವಿವಿಧ ರಂಗಗಳ ಕಾರ್ಮಿಕರು, ಸರ್ಕಾರಿ ಮತ್ತು ಖಾಸಗಿ ವಲಯದ ಉದ್ಯೋಗಿಗಳು ಹಾಗೂ ಸಾಮಾನ್ಯ ಸಾರ್ವಜನಿಕರು ಶಿವಮೊಗ್ಗ ನಗರಕ್ಕೆ ಪ್ರಯಾಣಿಸುತ್ತಿದ್ದಾರೆ. ಸದ್ಯದ ಪರಿಸ್ಥಿತಿಯಲ್ಲಿ ಶಿವಮೊಗ್ಗ ನಗರ ಮತ್ತು ಗ್ರಾಮೀಣ ಮಾರ್ಗಗಳಲ್ಲಿ ಸಾರ್ವಜನಿಕರ ಹಾಗೂ ಕಾಲೇಜು ವಿದ್ಯಾರ್ಥಿಗಳ ಸಂಚಾರ ದಟ್ಟಣೆ ಹೆಚ್ಚಾಗಿದೆ.

ವಿಶೇಷವಾಗಿ, ರಾಜ್ಯ ಸರ್ಕಾರದ ಮಹತ್ವಾಕಾಂಕ್ಷಿ ಉಚಿತ ಸಾರಿಗೆ ಗ್ಯಾರಂಟಿ ಯೋಜನೆಯಾದ ‘ಶಕ್ತಿ ಯೋಜನೆ’ಯ ಅಭೂತಪೂರ್ವ ಯಶಸ್ಸಿನ ಹಿನ್ನೆಲೆಯಲ್ಲಿ ಬಸ್‌ಗಳಲ್ಲಿ ಮಹಿಳಾ ಪ್ರಯಾಣಿಕರ ಸಂಖ್ಯೆ ಗಣನೀಯವಾಗಿ ವೃದ್ಧಿಯಾಗಿದ್ದು, ಸಾರ್ವಜನಿಕ ಸಾರಿಗೆಗೆ ಸಾರ್ವಜನಿಕರಿಂದ ಅತ್ಯುತ್ತಮ ಸ್ಪಂದನೆ ವ್ಯಕ್ತವಾಗುತ್ತಿದೆ. ಈ ಹೆಚ್ಚುತ್ತಿರುವ ಪ್ರಯಾಣಿಕರ ಒತ್ತಡವನ್ನು ಮತ್ತಷ್ಟು ಸಮರ್ಥವಾಗಿ ನಿಭಾಯಿಸಲು ಹಾಗೂ ಸಾರ್ವಜನಿಕರಿಗೆ ಇನ್ನು ಹೆಚ್ಚಿನ ಸುಗಮ ಮತ್ತು ಸುಸಜ್ಜಿತ ಸಾರಿಗೆ ಸೌಲಭ್ಯವನ್ನು ಕಲ್ಪಿಸುವ ತುರ್ತು ಅಗತ್ಯವಿದೆ ಎಂದು ತಿಳಿಸಿದ್ದಾರೆ.

ಗ್ಯಾರಂಟಿ ಯೋಜನೆಯ ಲಾಭ ಪಡೆಯುತ್ತಿರುವ ಮಹಿಳೆಯರ, ವಿದ್ಯಾರ್ಥಿಗಳ ಹಾಗೂ ಒಟ್ಟಾರೆ ಶಿವಮೊಗ್ಗ ಸಾರ್ವಜನಿಕರ ಹಿತದೃಷ್ಟಿಯಿಂದ ಮತ್ತು ಪರಿಸರ ಸ್ನೇಹಿ ಹಸಿರು ಸಾರಿಗೆಗೆ ಹೆಚ್ಚಿನ ಉತ್ತೇಜನ ನೀಡುವ ನಿಟ್ಟಿನಲ್ಲಿ, ಶಿವಮೊಗ್ಗ ನಗರಕ್ಕೆ ನಿಯೋಜಿಸಲಾಗಿರುವ ಈ 50 ಹೊಸ ಇ-ಬಸ್‌ಗಳನ್ನು ರಸ್ತೆಗಿಳಿಸಬೇಕು ಹಾಗೂ ಬಸ್‌ಗಳ ಯಶಸ್ವಿ ಕಾರ್ಯಾಚರಣೆಗೆ ಪೂರಕವಾಗಿ ಅಗತ್ಯವಿರುವ ಅತ್ಯಾಧುನಿಕ ಇ-ಚಾರ್ಜಿಂಗ್ ಮೂಲಸೌಕರ್ಯಗಳನ್ನು ಸಹ ನಗರದಲ್ಲಿ ಅನುಷ್ಠಾನಗೊಳಿಸಬೇಕೆಂದು ಎಂದು ವಿನಂತಿಸಿ ಮಾಡಿದ್ದಾರೆ.

ಮನವಿಯನ್ನು ಸ್ವೀಕರಿಸಿದ ಸಾರಿಗೆ ಸಚಿವರು ವಿಷಯದ ಗಂಭೀರತೆಯನ್ನು ಅರಿತು ಶೀಘ್ರದಲ್ಲೇ ಸೂಕ್ತ ಕ್ರಮ ಕೈಗೊಳ್ಳುವ ಸಕಾರಾತ್ಮಕ ಭರವಸೆ ನೀಡಿದ್ದಾರೆ.

ಈ ಸಂದರ್ಭದಲ್ಲಿ ಜವಳಿ ಮೂಲಸೌಕರ್ಯ ಅಭಿವೃದ್ಧಿ ನಿಗಮದ ಉಪಾಧ್ಯಕ್ಷರು ಹಾಗೂ ಹೆಬ್ಬಾಳ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರಾದ ಜಿ.ವಿ. ಬಾಲಾಜಿಯವರು ಮತ್ತು ಶ್ರೀಜಿತ್ ಅವರು ಉಪಸ್ಥಿತರಿದ್ದರು.

RELATED ARTICLES

LEAVE A REPLY

Please enter your comment!
Please enter your name here

Most Popular

Recent Comments